
ಚಿಕ್ಕಬಳ್ಳಾಪುರ: ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆಯ ಪ್ರಕರಣದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಡಿ ಗ್ರೂಪ್ ನೌಕರನಿಗೆ 4 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡ ಹಾಗೂ 1.35 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲಿಗೆ ಆದೇಶಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಯ ಡಿ ಗ್ರೂಪ್ ನೌಕರ ಶ್ರೀರಾಮಯ್ಯ ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆಯಡಿ 4 ವರ್ಷ ಜೈಲು ಶಿಕ್ಷೆ ಅನುಭವಿಸಲಿದ್ದಾರೆ. ನ್ಯಾಯಾಲಯವು 10 ಲಕ್ಷ ರೂ. ದಂಡ ವಿಧಿಸಿದೆ ಮತ್ತು 1.35 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶಿಸಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ತೀರ್ಪು ಹೊರಬಿದ್ದಿದೆ.

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ ಗ್ರೂಪ್ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀರಾಮಯ್ಯ ವಿರುದ್ದ ಆದಾಯಕ್ಕಿಂತಲೂ ಅಧಿಕ ಆಸ್ತಿ ಸಂಪಾದಿಸಿದ್ದರ ಬಗ್ಗೆ ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಲೋಕಾಯುಕ್ತ ಪೊಲೀಸರು ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಶ್ರೀರಾಮಯ್ಯ ವಿರುದ್ಧದ ಆರೋಪ ಸಾಬೀತಾಗಿತ್ತು. ಈ ಪ್ರಕರಣದಲ್ಲಿ ಚಿಕ್ಕಬಳ್ಳಾಪುರದ ಲೋಕಾಯುಕ್ತ ಪೊಲೀಸ್ ಠಾಣೆಯ ಡಿವೈಎಸ್ಪಿ ಸಿ.ಎನ್ ಬೋಪಯ್ಯ, ಡಿ.ಅಶೋಕ್ ಅವರು ತನಿಖಾಧಿಕಾರಿಗಳಾಗಿದ್ದರು. ವಿಶೇಷ ಸಾರ್ವಜನಿಕ ಅಭಿಯೋಜಕರಾಗಿ ಗೋವಿಂದರೆಡ್ಡಿ ನ್ಯಾಯಾಲಯದಲ್ಲಿ ವಾದಮಂಡನೆ ಮಾಡಿದ್ದರು.