
ದಕ್ಷಿಣ ಕನ್ನಡ(ಮಂಗಳೂರು): ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿರುವ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ 12ರಂದು ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದ್ದಾರೆನ್ನಲಾದ ವಿಚಾರಕ್ಕೆ ಸಂಬಂಧಿಸಿದಂತೆ ಈ ಪ್ರಕರಣ, ಘಟನೆ ನಡೆದು 17 ದಿನಗಳ ಬಳಿಕ ದಾಖಲಾಗಿದೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೊಲೆಗೀಡಾದ ಸುಹಾಸ್ ಶೆಟ್ಟಿ ಅವರಿಗೆ ಶೃದ್ದಾಂಜಲಿ ಸಭೆ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ನಡೆದಿತ್ತು. ಈ ಸಂದರ್ಭ ಡಾ. ಕಲ್ಲಡ್ಕ ಪ್ರಭಾಕರ ಭಟ್ ಭಾಗವಹಿಸಿದ್ದರು.

ಅಲ್ಲಿ ನೆರೆದಿದ್ದ ಸುಮಾರು 500 ಜನರನ್ನುದ್ದೇಶಿಸಿ ಭಾಷಣ ಮಾಡುವ ವೇಳೆ, ಸಮಾಜದ ಸ್ವಾಸ್ತ್ಯ ಕೆಡುವಂತೆ ಮತೀಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾದ್ಯತೆಗಳಿರುವುದರಿಂದ ಈ ಬಗ್ಗೆ ಜೂನ್ 2ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ರ ನಂಬ್ರ : 60/2025, ಕಲಂ: 353(2) BNS ರಂತೆ ಪ್ರಕರಣ ದಾಖಲಿಸಿಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.