ಮೈಸೂರು:ಹೆಚ್ಚುವರಿ ವಿದ್ಯುತ್ ಬೇಡಿಕೆ ಹಿನ್ನೆಲೆಯಲ್ಲಿ ಮೈಸೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ 44 ಉಪ ವಿದ್ಯುತ್ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಅವರು ಮಾತನಾಡಿದರು.

j3tvkannada.in
ರಾಜ್ಯದಲ್ಲಿ ವಿದ್ಯುತ್ ಕೊರತೆಯಾಗದಂತೆ ಹೆಚ್ಚುವರಿಯಾಗಿ ವಿದ್ಯುತ್ ಸಿಗುತ್ತಿದೆ. ಜತೆಗೆ ಬೇಡಿಕೆಯು ಹೆಚ್ಚಾಗುತ್ತಿರುವುದರಿಂದ ಇಡೀ ರಾಜ್ಯದಲ್ಲಿ100 ಸಬ್ ಸ್ಟೇಷನ್ಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದ್ದು, ಕೇಂದ್ರಗಳ ಸ್ಥಾಪನೆಗೆ ಅಗತ್ಯ ಭೂಮಿಯನ್ನು ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ರಾಜ್ಯದಲ್ಲಿನ ಎಲ್ಲಾ ಅಕ್ರಮ ಕೃಷಿ ಪಂಪ್ಸೆಟ್ಗಳನ್ನು ಮೂರು ತಿಂಗಳಲ್ಲಿ ಸಕ್ರಮಗೊಳಿಸಲಾಗುವುದು. ಕುಸುಮ್ ಸಿ ಯೋಜನೆಯಡಿ ಸೌರಶಕ್ತಿಯಿಂದ 2400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಅವರು ತಿಳಿಸಿದ್ದಾರೆ.
ವಿದ್ಯುತ್ ಲೈನ್ ಬದಲಾವಣೆ
ಮಂಡಕಳ್ಳಿ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿದ್ಯುತ್ ಮಾರ್ಗವನ್ನು ಬದಲಿಸಲಾಗುವುದು. ಇದರೊಂದಿಗೆ ಬೇರೆ ರಾಷ್ಟ್ರೀಯ ಹೆದ್ದಾರಿಗಳಲ್ಲಿಅಗತ್ಯ ಇರುವ ಕಡೆ ವಿದ್ಯುತ್ ಮಾರ್ಗವನ್ನು ಬದಲಿಸುವ ಕಾರ್ಯ ನಡೆಸಲಾಗುವುದು. ಈ ಸಂಬಂಧ ನಾಳೆ ಸೆಸ್ಕ್ ಅಧಿಕಾರಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದರು.
ಮೈಸೂರು ಸೇರಿದಂತೆ ರಾಜ್ಯದಲ್ಲಿಒಟ್ಟು 4.5 ಲಕ್ಷ ಅಕ್ರಮ ಕೃಷಿ ಪಂಪ್ಸೆಟ್ಗಳಿದ್ದು, ಅದರಲ್ಲಿಈಗಾಗಲೇ 2.5 ಲಕ್ಷ ಕೃಷಿ ಪಂಪ್ ಸೆಟ್ಗಳನ್ನು ಸಕ್ರಮಗೊಳಿಸಲಾಗಿದೆ. ಬಾಕಿ ಇರುವ 2 ಲಕ್ಷ ಕೃಷಿ ಪಂಪ್ ಸೆಟ್ಗಳನ್ನು ಶೀಘ್ರದಲ್ಲಿ ಸಕ್ರಮಗೊಳಿಸಲಾಗುವುದು ಎಂದರು. ವಿದ್ಯುತ್ ಮಾರ್ಗದಿಂದ 500 ಮೀ.ಅಂತರದೊಳಗೆ ಇದ್ದರೆ ಆದಷ್ಟು ಬೇಗ ಸಕ್ರಮಗೊಳಿಸಲಾಗುವುದು. ಇಲ್ಲದೇ ಇದ್ದರೆ ರೈತರು ನವೀಕೃತ ಶೀಘ್ರ ಸಂಪರ್ಕ ಯೋಜನೆಯಡಿ ಸಕ್ರಮ ಮಾಡಿಕೊಳ್ಳಬಹುದು ಎಂದರು. ಮೈಸೂರು ಜಿಲ್ಲೆಯಲ್ಲಿನ 18 ಹಾಡಿಗಳಿಗೆ ವಿದ್ಯುತ್ ಸೌಲಭ್ಯವನ್ನು ಕಲ್ಪಿಸಲಾಗಿದ್ದು, 618 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಮೂರು ತಿಂಗಳಲ್ಲಿ ಹಾಡಿಗಳಲ್ಲಿನ ಎಲ್ಲಾ ಮನೆಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದರು.
ಜೂ. 11ರಂದು ಗೌರಿ ಬಿದನೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿಎಂ ಚಾಲನೆ ನೀಡಲಿದ್ದಾರೆ. ಮೈಸೂರಿನಲ್ಲಿ ಸಹ 175 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದೆ. ಈ ಯೋಜನೆಯಡಿ ಉತ್ಪಾದನೆಯಾಗುವ ವಿದ್ಯುತ್ ಅನ್ನು ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ಬಳಸಿಕೊಳ್ಳಲಾಗುವುದು. ಹಗಲಿನ ವೇಳೆ ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದರು. ಇಂಧನ ಇಲಾಖೆಯಿಂದ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿಯೂ ಪ್ರಗತಿ ಪರಿಶೀಲನಾ ಸಭೆ ನಡೆಸುವ ಮೂಲಕ ಸಮಸ್ಯೆಗಳನ್ನು ಆಲಿಸುವ ಕಾರ್ಯದೊಂದಿಗೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ.
ಸ್ಥಳೀಯ ಚುನಾಯಿತ ಪ್ರತಿನಿಧಿಗಳೊಂದಿಗೆ ಸಭೆ ನಡೆಸುತ್ತಿರುವುದರಿಂದ ಸಮಸ್ಯೆಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು. ಶಾಸಕ ಜಿ.ಟಿ.ದೇವೇಗೌಡ, ಕೆ.ಹರೀಶ್ಗೌಡ, ರವಿ ಶಂಕರ್, ವಿಧಾನ ಪರಿಷತ್ ಸದಸ್ಯ ಡಿ.ತಿಮ್ಮಯ್ಯ, ರಾಜ್ಯ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪ ಅಮರನಾಥ್, ಸಮಿತಿ ಜಿಲ್ಲಾಧ್ಯಕ್ಷ ಅರುಣ್ ಕುಮಾರ್, ಸೆಸ್ಕ್ ಎಂಡಿ ಮುನಿ ಗೋಪಾಲ ರಾಜು ಇದ್ದರು.