
ಉಡುಪಿ : ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್) ಹಬ್ಬವನ್ನು ಶನಿವಾರ ಸಂಭ್ರಮ, ಸಡಗರದಿಂದ ಆಚರಿಸಿದರು.

ಉಡುಪಿ ನಗರ, ಕಾಪು, ಕುಂದಾಪುರ ಸೇರಿದಂತೆ ವಿವಿಧೆಡೆ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿತು. ಧರ್ಮಗುರುಗಳು ಶಾಂತಿ, ಸೌಹಾರ್ದತೆಯ ಸಂದೇಶ ನೀಡಿದರು. ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಉಡುಪಿ ನಗರ, ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿತು. ಮುಸ್ಲಿಮರು ಬೆಳಗ್ಗೆ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಝ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.
ಉಡುಪಿ ಜಾಮಿಯಾ ಮಸೀದಿಯಲ್ಲಿ ಮೌಲಾನಾ ಅಬ್ದುರ್ ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನಾ ಇನಾಯುತುಲ್ಲಾ ರಝ್ವಿ ಹಾಗೂ ಬ್ರಹ್ಮಗಿರಿ ಹಾಶಿಮಿ ಮಸೀದಿಯ ಇಮಾಮ್ ಮೌಲಾನಾ ಉಬೇದಾರ್ ರೆಹಮಾನ್ ನದ್ವಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತು.

ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು.
ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಈದ್ಗಾ ಮೈದಾನದಲ್ಲಿ ಧರ್ಮಗುರು ಮೌಲಾನಾ ಕರಾರ್ ಹುಸೇನ್ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ನೆರವೇರಿತು.
ಈ ಸಂದರ್ಭ ಧರ್ಮಗುರುಗಳು ಶಾಂತಿ, ಸೌಹಾರ್ದತೆಯ ಸಂದೇಶ ನೀಡಿದರು. ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಉಡುಪಿ ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.