
ಮೈಸೂರು: ರಾಜಧಾನಿ ಬೆಂಗಳೂರು ನಂತರ ‘ಸಾಂಸ್ಕೃತಿಕ ನಗರಿ’ ಮೈಸೂರು ವೇಗವಾಗಿ ಬೆಳೆಯುತ್ತಿದೆ. ಹೀಗಾಗಿ ಮೈಸೂರಿನ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರಕಾರ ಮಹತ್ವಾಕಾಂಕ್ಷೆಯ ‘ನವ ಮೈಸೂರು ನಿರ್ಮಾಣ’ ಯೋಜನೆಯನ್ನು ಅನುಷ್ಠಾನಗೊಳಿಸಲು ಗಂಭೀರ ಚಿಂತನೆ ನಡೆಸಿದೆ. ಬೆಂಗಳೂರಿನಲ್ಲಿಈ ಸಂಬಂಧ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ಅವರು ಗುರುವಾರ ಉನ್ನತ ಮಟ್ಟದ ಸಭೆ ನಡೆಸಿ ಯೋಜನೆಯ ಬಗ್ಗೆ ಚರ್ಚೆ ನಡೆಸಿದರು. ಮೈಸೂರಿನ ಸುತ್ತಮುತ್ತಲಿನ ಪ್ರದೇಶಗಳನ್ನು ನಗರ ವ್ಯಾಪ್ತಿಗೆ ತಂದು ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಸಿದ್ಧಪಡಿಸಲು ಸೂಚಿಸಿದರು.

j3tvkannada.in
ರಾಜಧಾನಿ ಬೆಂಗಳೂರಿನಂತೆಯೇ ಮೈಸೂರು ಸಹ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಇಲ್ಲಿಐಟಿ, ಬಿಟಿ ಸೇರಿದಂತೆ ಕೈಗಾರಿಕೆಗಳು, ವಸತಿ ಯೋಜನೆಗಳು ಹೆಚ್ಚಾಗುತ್ತಿವೆ. ಮೈಸೂರು ವಿಸ್ತರಣೆಯಾಗುತ್ತಿರುವ ಹಿನ್ನೆಲೆ ಇದಕ್ಕೆ ಪೂರಕವಾಗಿ ಸಮಗ್ರ ಯೋಜನೆ ಸಿದ್ಧಪಡಿಸಲು ಸಿಎಂ ಸಿದ್ಧರಾಮಯ್ಯ ನೇತೃತ್ವದ ಸರಕಾರ ಗಂಭೀರವಾಗಿ ಪರಿಗಣಿಸಿ ಅಭಿವೃದ್ಧಿಯತ್ತ ಮಹತ್ವದ ಹೆಜ್ಜೆ ಇರಿಸಿದೆ ಎಂದು ಸಚಿವ ಬಿ.ಎಸ್.ಸುರೇಶ ಅವರು ಹೇಳಿದರು. ಈ ಸಮಗ್ರ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಹೀಗಾಗಿ ಸರಕಾರದ ಮೇಲೆ ಯಾವುದೇ ಆರ್ಥಿಕ ಹೊರೆ ಬೀಳುವುದಿಲ್ಲ. ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿಅನುಷ್ಠಾನಕ್ಕೆ ತಂದು ಸಾಂಸ್ಕೃತಿಕ ನಗರವನ್ನು ಸಮಗ್ರ ವಾಗಿ ಅಭಿವೃದ್ಧಿಪಡಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ ಎಂದು ತಿಳಿಸಿದರು.
ಬಂಡವಾಳ ಹೂಡಿಕೆಯಲ್ಲಿ ಬೆಂಗಳೂರಿನ ನಂತರದ ಸ್ಥಾನದಲ್ಲಿ ಮೈಸೂರು ನಗರವಿದ್ದು, ಇಲ್ಲಿ ಹೂಡಿಕೆಯಾಗುತ್ತಿರುವ ಬಂಡವಾಳದ ಮೊತ್ತ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಬಂಡವಾಳ ಹೂಡಿಕೆಗೆ ನೆಚ್ಚಿನ ತಾಣವಾಗಿದ್ದು, ಉದ್ಯಮಿಗಳನ್ನು ಆಕರ್ಷಿಸುವ ದಿಸೆಯಲ್ಲಿ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ವಿವರಿಸಿದರು. ಯಾವುದೇ ತೊಂದರೆ ಇಲ್ಲದೇ ಉದ್ಯಮಗಳನ್ನು ಸ್ಥಾಪಿಸಲು ಹೂಡಿಕೆದಾರರಿಗೆ ತ್ವರಿತವಾಗಿ ಭೂಮಿ ಹಂಚಿಕೆ, ಆವಿಷ್ಕಾರ ಆಧರಿತ ನೀತಿಗಳನ್ನು ರೂಪಿಸುವುದು ಮತ್ತು ಮೂಲ ಸೌಕರ್ಯ ಹೂಡಿಕೆಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಸರಕಾರ ಗಮನ ಹರಿಸಿದೆ ಎಂದು ತಿಳಿಸಿದರು.
ನವ ಮೈಸೂರು ನಿರ್ಮಾಣ ಯೋಜನೆಗೆ ಪ್ರಮುಖವಾಗಿ ಐದು ಆಧಾರ ಸ್ತಂಭಗಳನ್ನು ಗುರುತಿಸಲಾಗಿದೆ. ಉದ್ಯಮ ಮೈಸೂರು, ನಿಪುಣ ಮೈಸೂರು, ಸುಖೀವಾಸ ಮೈಸೂರು, ಪ್ರವಾಸೋದ್ಯಮ ಮೈಸೂರು ಮತ್ತು ಸಂಚಾರ ಮೈಸೂರು ಎಂಬ ಪ್ರಮುಖವಾದ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸುವ ಉದ್ದೇಶವನ್ನು ಹೊಂದಲಾಗಿದೆ. ಮೈಸೂರು ಕ್ಷೇತ್ರದ ಯೋಜನೆಯಲ್ಲಿಅತ್ಯಾಧುನಿಕ ಉತ್ಪಾದನಾ ಹಬ್ ಸ್ಥಾಪನೆ ಮಾಡುವುದು, ಒಟ್ಟಾರೆ ಈ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುವುದು. ನಿಪುಣ ಮೈಸೂರು ವಲಯವನ್ನು ಸ್ಥಾಪಿಸಿ ಇದರ ಮೂಲಕ ಕೌಶಲ ತರಬೇತಿ ಮತ್ತು ಕೌಶಲಾಧಾರಿತ ಉದ್ಯೋಗಗಳಿಗೆ ಆದ್ಯತೆ ನೀಡುವುದು, ಉದ್ಯಮಶೀಲತ್ವ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದು.