
ಬಳ್ಳಾರಿ: ತುಂಗಭದ್ರಾ ಜಲಾಶಯಕ್ಕೆ ಸಮಾನಾಂತರವಾಗಿ ಜಲಾಶಯ ನಿರ್ಮಾಣವಾಗಬೇಕು ಎಂಬ ಚರ್ಚೆಗಳು ಕಳೆದ ಹಲವು ವರ್ಷಗಳಿಂದಲೂ ನಡೆಯುತ್ತಲೇ ಇವೆ. ಈ ಬಗ್ಗೆ ಗುರುವಾರ ವಿಧಾನ ಪರಿಷತ್ನಲ್ಲಿ ಬಸನಗೌಡ ಬಾದರ್ಲಿ ಅವರು ಉಪ ಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಅವರಲ್ಲಿ ತುಂಗಭದ್ರಾ ಡ್ಯಾಂನಲ್ಲಿ ಹೂಳು ತುಂಬಿದೆ. ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಕೈಗೊಂಡಿರುವ ಕ್ರಮಗಳು ಏನು? ಎಂದು ಪರಿಷತ್ನಲ್ಲಿ ಪ್ರಶ್ನಿಸಿದ್ದಾರೆ.

ಈ ಪ್ರಶ್ನೆಗೆ ಉತ್ತರ ನೀಡಿದ ಡಿ. ಕೆ. ಶಿವಕುಮಾರ್, “ಕೇಂದ್ರ ಜಲಶಕ್ತಿ ಸಚಿವರು ಪೆನ್ನಾರ್ ನದಿ ವಿಚಾರವಾಗಿ ನಮ್ಮನ್ನು ಹಾಗೂ ತಮಿಳುನಾಡಿನವರನ್ನು ಚರ್ಚೆಗೆ ಮಾರ್ಚ್ 18ರಂದು ಕರೆದಿದ್ದಾರೆ. ಅಂದು ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಹಾಗೂ ಪರ್ಯಾಯ ಪರಿಹಾರಗಳ ಬಗ್ಗೆ ಕೇಂದ್ರ ಸಚಿವರ ಜೊತೆ ಚರ್ಚಿಸಲಾಗುತ್ತದೆ” ಎಂದು ಹೇಳಿದರು.
ಈ ವಿಚಾರವಾಗಿ ಆಂಧ್ರ ಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿಗಳ ಬಳಿ ಮಾತನಾಡಿ, ಪತ್ರವನ್ನು ಸಹ ಬರೆದಿದ್ದೇನೆ. ರಾಜಸ್ಥಾನದ ಉದಯಪುರದಲ್ಲಿ ನಡೆದ ಸಮಾವೇಶದಲ್ಲಿ ಎರಡೂ ರಾಜ್ಯಗಳ ಸಚಿವರ ಜೊತೆ ಚರ್ಚಿಸಿದ್ದೇನೆ. ಆಂಧ್ರ ಪ್ರದೇಶದ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಯೋಜನೆ ಬಗ್ಗೆ ಪ್ರಾತ್ಯಕ್ಷಿಕೆ ತೋರಿಸಿ ಚರ್ಚೆ ಮಾಡಲು ಸಮಯ ಕೇಳಿದ್ದೆ” ಎಂದು ಡಿ. ಕೆ. ಶಿವಕುಮಾರ್ ತಿಳಿಸಿದರು.
ಡಿ. ಕೆ. ಶಿವಕುಮಾರ್ ತಮ್ಮ ಉತ್ತರದಲ್ಲಿ, “ಎರಡು ರಾಜ್ಯಗಳ ಜೊತೆ ಚರ್ಚೆ ಮಾಡಿದ ನಂತರ ತುಂಗಭದ್ರಾ ಮಂಡಳಿ ಮುಂದೆ ಈ ಯೋಜನೆಗಳ ವರದಿ ಸಲ್ಲಿಸಲಾಗುತ್ತದೆ. ಆಂಧ್ರ ಪ್ರದೇಶದ ಮುಖ್ಯಮಂತ್ರಿಗಳು ಈ ವಿಚಾರದ ಕುರಿತು ಚರ್ಚೆ ಮಾಡಲಾಗುತ್ತದೆ” ಎಂದು ಭರವಸೆ ನೀಡಿದ್ದಾರೆ” ಎಂದರು. ನೀರು ವ್ಯರ್ಥವಾಗುತ್ತಿದೆ ಸಚಿವ ಡಿ. ಕೆ. ಶಿವಕುಮಾರ್, “ತುಂಗಭದ್ರಾ ಡ್ಯಾಂನಲ್ಲಿ ಹೂಳು ತುಂಬಿರುವ ಕಾರಣಕ್ಕೆ ಸುಮಾರು 25 ರಿಂದ 30 ಟಿಎಂಸಿ ಅಡಿ ನೀರು ನಮಗೆ ಸಿಗದೆ ವ್ಯರ್ಥವಾಗುತ್ತಿದೆ.
ಸೋಮತೋಲಿತ ಡ್ಯಾಂ ನಿರ್ಮಾಣಕ್ಕೆ ಸುಮಾರು 15 ಸಾವಿರ ಎಕರೆ ಭೂಮಿ ಬೇಕು ಎಂದು ಅಂದಾಜಿಸಲಾಗಿದೆ. ಡಿ.ಪಿ.ಆರ್ ಕೂಡಾ ತಯಾರು ಮಾಡಲಾಗಿದೆ” ಎಂದು ವಿವರಣೆ ನೀಡಿದರು. “ಸಚಿವರಾದ ಬೋಸರಾಜು, ಈ ಭಾಗದ ಇತರ ಶಾಸಕರು ತುಂಗಭದ್ರಾ ಸಮಾನಾಂತರ ಡ್ಯಾಂ ಆಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ಕುರಿತು ಸಚಿವರಾದ ವಿ. ಸೋಮಣ್ಣ, ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ” ಎಂದು ಡಿ. ಕೆ. ಶಿವಕುಮಾರ್ ಹೇಳಿದರು.