
ಬೆಂಗಳೂರು ಗ್ರಾಮಾಂತರ : ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂಸ್ವಾಧೀನ ವಿರೋಧಿಸಿ ಜೂನ್ 25 ರಂದು ರೈತರು, ದಲಿತರು, ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾದ ಸಂಯುಕ್ತ ಹೋರಾಟ ಸಂಘಟನೆಯಲು ‘ದೇವನಹಳ್ಳಿ ಚಲೋ’ ಹೋರಾಟಕ್ಕೆ ಕರೆ ನೀಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಯುಕ್ತ ಹೋರಾಟ ಕರ್ನಾಟಕದ ಸಂಚಾಲಕ ಬಡಗಲಪುರ ನಾಗೇಂದ್ರ ಅವರು ಕರ್ನಾಟಕ ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಟಿ. ಯಶವಂತ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ‘ಈ ಅಧಿಸೂಚನೆಯನ್ನು ಸಂಪೂರ್ಣವಾಗಿ ರದ್ದುಪಡಿಸುವಂತೆ ಆಗ್ರಹಿಸಿ, ದೇವನಹಳ್ಳಿ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಈ ಹೋರಾಟದಲ್ಲಿ ರೈತ, ಕಾರ್ಮಿಕ, ದಲಿತ, ಮಹಿಳಾ ಮತ್ತು ವಿದ್ಯಾರ್ಥಿ ಸಂಘಟನೆಗಳು ಪಾಲ್ಗೊಳ್ಳಲಿವೆ. ಸರ್ಕಾರಗಳಿಗೆ ಈ ಭೂಮಿ ಕೇವಲ ಮಾರಾಟಕಷ್ಟೇ. ಆದರೆ, ಇಲ್ಲಿನ ರೈತರಿಗೆ ಇದು ಬದುಕಾಗಿದೆ. ಯಾವುದೇ ಕಾರಣಕ್ಕೂ ನಾವು ಭೂಮಿಯನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.
ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ 1,180 ದಿನಗಳಿಂದ 13 ಗ್ರಾಮಗಳ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಶೇಕಡ 80 ರಷ್ಟು ರೈತರು ಲಿಖಿತವಾಗಿ ಅಸಮ್ಮತಿ ವ್ಯಕ್ತಪಡಿಸಿದ್ದಾರೆ. ಆದರೂ ಕೆಐಎಡಿಬಿ ಬಲವಂತದಿಂದ ಭೂ ಸ್ವಾಧೀನ ಮಾಡುತ್ತಿದ್ದು, ಭೂಸ್ವಾಧೀನ ಕಾಯ್ದೆ–2013ರ ಸ್ಪಷ್ಟ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪಿಸಿದರು.