
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳಗ್ಗೆಯೇ ಮಳೆ ಸುರಿದಿದೆ. ಯಶವಂತಪುರ, ಮಹಾಲಕ್ಷ್ಮಿ ಲೇಔಟ್ ಸುತ್ತಮುತ್ತ ಮಳೆಯಾಗಿದೆ. ಒಡಿಶಾ ಕರಾವಳಿಯಲ್ಲಿ ಸೈಕ್ಲೋನ್ ಪರಿಣಾಮದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಇಂದು ಮತ್ತು ನಾಳೆ ಸಹ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಮೈಸೂರು, ಚಿತ್ರದುರ್ಗ, ತುಮಕೂರು ಮತ್ತು ಕೊಡಗು ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಹಲವೆಡೆಯೂ ಮಳೆಯಾಗಲಿದೆ.