
: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಬುಧವಾರ ಆದೇಶಿಸಿದೆ. ಪಾವಗಡ ತಾಲ್ಲೂಕು ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀರಾಮ್ ಎಂಬಾತನಿಗೆ ಜೀವಾವಧಿ ಶಿಕ್ಷೆ ಜತೆಗೆ ₹1.50 ಲಕ್ಷ ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ₹8 ಲಕ್ಷ ಪರಿಹಾರ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಸಂಕ್ರಾಂತಿ ಹಬ್ಬದ ಸಮಯದಲ್ಲಿ ರಂಗೋಲಿ ತರಲು ಬಾಲಕಿ ಪಕ್ಕದ ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದಳು. ಇದೇ ಮಾರ್ಗದಲ್ಲಿ ಸ್ಕೂಟಿಯಲ್ಲಿ ತೆರಳುತ್ತಿದ್ದ ಶ್ರೀರಾಮ್, ಪಕ್ಕದ ಹಳ್ಳಿಯವರೆಗೂ ಬಿಡುವುದಾಗಿ ಹೇಳಿ ಬಾಲಕಿಯನ್ನು ಹತ್ತಿಸಿಕೊಂಡಿದ್ದಾನೆ. ಸ್ವಲ್ಪ ದೂರ ತೆರಳಿದ ನಂತರ ಹಳ್ಳದ ಬಳಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ಸಂಬಂಧ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು, ಆರೋಪ ಸಾಬೀತಾಗಿದ್ದರಿಂದ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಬಾಲಕಿ ಪರವಾಗಿ ಸರ್ಕಾರಿ ವಿಶೇಷ ಅಭಿಯೋಜಕಿ ಕೆ.ಎಸ್.ಆಶಾ ವಾದ ಮಂಡಿಸಿದ್ದರು.