
ಹುಬ್ಬಳ್ಳಿ : ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದೀಗ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ನಾಲ್ವರು ಮಹಿಳೆಯರು ಸಾವನ್ನಪ್ಪಿರುವ ಘಟನೆ (ಏಪ್ರಿಲ್ 6) ಹುಬ್ಬಳ್ಳಿ ಹೊರವಲಯದ ನೂಲ್ವಿ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಸುಜಾತಾ ಹಿರೇಮಠ (60), ಗಾಯತ್ರಿ ಮಾಂತನಮಠ(67), ಶಕುಂತಲಾ ಹಿರೇಮಠ(72) ಸಂಪತ್ ಕುಮಾರಿ (63) ಎಂದು ಗುರುತಿಸಲಾಗಿದೆ. ಮೃತರು ಹುಬ್ಬಳ್ಳಿಯ ಲಿಂಗರಾಜ ನಗರದ ನಿವಾಸಿಗಳು ಎಂದು ತಿಳಿದುಬಂದಿದೆ. ಇನ್ನು ಅಪಘಾತದಲ್ಲಿ ಗಾಯಗೊಂಡಿರುವ ಕಾರು ಚಾಲಕ ವಿರೇಶ್ ಹಿರೇಮಠ (65) ಎಂಬುವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದುಬಂದಿದೆ.

ಹಾವೇರಿಯಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ಸಂಪತ್ ಕುಮಾರಿ ಮತ್ತು ವಿರೇಶ್ ಹಿರೇಮಠ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಸಂಪತ್ ಕುಮಾರಿ ಅವರು ಮೃತಪಟ್ಟಿದ್ದು, ಕಾರು ಚಾಲಕ ವಿರೇಶ್ ಹಿರೇಮಠ ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ. ಈ ಅಪಘಾತ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.