
ಬೆಂಗಳೂರು : ಆಂಧ್ರಪ್ರದೇಶದ ಕರಾವಳಿ ಮಧ್ಯಭಾಗ ಮತ್ತು ನೆರೆಹೊರೆಯ ಪ್ರದೇಶದಲ್ಲಿ ಚಂಡಮಾರುತದ ಸಂಭವ ಇರುವುದರಿಂದ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಂದು ವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ ಬೆಂಗಳೂರು ನಗರ ಸೇರಿದಂತೆ ಹಲವು ಕಡೆ ಮಳೆಯಾಗಿದೆ.
ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಪ್ರಮುಖವಾಗಿ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರದಲ್ಲಿ 4 ಸೆಂ.ಮೀ., ಧರ್ಮಸ್ಥಳದಲ್ಲಿ 3 ಸೆಂ.ಮೀ., ಚಿಕ್ಕಮಗಳೂರು ಜಿಲ್ಲೆಯ ಜಯಪುರ, ಮೈಸೂರು ಜಿಲ್ಲೆಯ ಸರಗೂರು, ಹಾವೇರಿ ಯಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ.

j3tvkannada
ಏ.15ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಐ.ಎಂ.ಡಿ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಸೋಮವಾರ ವ್ಯಾಪಕ ಮಳೆಯಾಗಿದ್ದು, ವಿದ್ಯುತ್ ಕಂಬ, ಮರಗಳು ಬಿದ್ದಿದ್ದರಿಂದ ಅಪಾರ ನಷ್ಟ ಸಂಭವಿಸಿದೆ. ಕೊಡಗು ಜಿಲ್ಲೆಯ ಹಲವೆಡೆ ಮಂಗಳವಾರ ಗುಡುಗು ಸಿಡಿಲಿನೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಅಲ್ಲದೆ ಸಿಡಿಲಿನ ಬಗ್ಗೆ ಎಚ್ಚರಿಕೆ ವಹಿಸುವಂತೆಯೂ ಸೂಚಿಸಿದೆ.