
ಕೊಪ್ಪಳ: ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಅರಿವು ಮೂಡಿಸಲು ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದರೂ ತಾಲ್ಲೂಕಿನಲ್ಲಿ ಬಾಲ್ಯ ವಿವಾಹಗಳು ನಡೆಯುತ್ತಿರುವುದು ಕಂಡು ಬಂದಿದೆ. ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ತಹಶೀಲ್ದಾರ್ ವಿಶ್ವನಾಥ ಮುರುಡಿ ಅವರು ಸೂಚಿಸಿದರು.

j3tvkannada
ತಾಲ್ಲೂಕಿನ ಎಲ್ಲಾ ವಲಯಗಳು ಹಾಗೂ ಗ್ರಾಮಮಟ್ಟದಲ್ಲಿರುವ ಅಧಿಕಾರಿಗಳು ಜಾಗೃತಿ ಕಾರ್ಯಕ್ರಮಗಳ ಮೂಲಕ ಬಾಲ್ಯ ವಿವಾಹ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು. ತಾಲ್ಲೂಕು ಪಂಚಾಯಿತಿ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿ ರಾಜಶೇಖರ ಕೆ.ಮಾತನಾಡಿ, ಗ್ರಾಮ ಹಾಗೂ ತಾಲ್ಲೂಕು ಮಟ್ಟದ ಬಾಲ್ಯ ವಿವಾಹ ಅಧಿಕಾರಿಗಳು ತಾಲ್ಲೂಕಿನಲ್ಲಿ ಬಾಲ್ಯ ವಿವಾಹ ನಡೆಯದಂತೆ ತಡೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ಕಂದಾಯ ನಿರೀಕ್ಷಕರಾದ ಮಂಜುನಾಥ ಹಿರೇಮಠ, ಹನುಮಂತಪ್ಪ, ರವಿಕುಮಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಚಂದ್ರಕಲಾ ಸೇರಿದಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು.